[1] ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.
[2] ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
[3] ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.
[4] ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.
[5] ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.
[6] ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.
[7] ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.
[8] ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
[9] ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.
[10] ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
[11] ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.
[12] ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
[13] ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.
[14] ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.
[15] ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
[16] ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
[17] ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
[18] ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.
[19] ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
[20] ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,
[21] ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.
[22] ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.
[23] ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
[24] ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.
[25] ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
[26] ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,
[27] ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
[28] ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
[29] ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
[30] ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.
[31] ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
[32] ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
[33] ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
[34] ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.
[35] ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
[36] ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
[37] ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.