Skip to content
Opens in a new window
Listen to this chapter • 3:09

[1] ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

[2] ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

[3] ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.

[4] ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.

[5] ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

[6] ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿ ಉರಿಯುತ್ತಿದ್ದಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.

[7] ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

[8] ಎಫ್ರಾಯೀಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೀಮು ತಿರುವಿಹಾಕದ ರೊಟ್ಟಿಯಂತಿದೆ.

[9] ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

[10] ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.

[11] ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.

[12] ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.

[13] ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!

[14] ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.

[15] ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.

[16] ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.

ಹೋಶೇಯನು — Chapters