[1] ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”
[2] ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
[3] ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
[4] ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
[5] ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
[6] ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
[7] ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.
[8] ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
[9] ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.
[10] ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
[11] ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
[12] ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
[13] ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
[14] ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
[15] ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
[16] ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
[17] ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
[18] ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
[19] ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
[20] ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
[21] ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
[22] ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
[23] ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.
[24] ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
[25] ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
[26] ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
[27] ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.