Skip to content
Opens in a new window
Listen to this chapter • 4:34

[1] ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ.

[2] ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.

[3] ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.

[4] ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

[5] “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.

[6] ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.

[7] ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

[8] “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

[9] “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”

[10] ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?

[11] ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.

[12] ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.

[13] ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.

[14] “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.

[15] ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”

[16] ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”

[17] ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

ಮಲಾಕಿಯನು — Chapters