Skip to content
Opens in a new window
Listen to this chapter • 5:04

[1] ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?

[2] ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.

[3] ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.

[4] ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.

[5] ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?

[6] ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!

[7] ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು.

[8] ಆದರೆ ಸ್ವತಃ ನೀವೇ ಕೆಟ್ಟದ್ದನ್ನು ಮಾಡುತ್ತೀರಿ ಮತ್ತು ಮೋಸ ಮಾಡುತ್ತೀರಿ! ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನಿಗೇ ನೀವು ಹೀಗೆ ಮಾಡುತ್ತೀರಿ.

[9] ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.

[11] ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.

[12] “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.

[13] “ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.

[14] ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.

[15] ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.

[16] “ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

[17] ಆದರೆ ಪ್ರಭುವಿನೊಂದಿಗೆ ಸಂಬಂಧವನ್ನು ಹೊಂದಿರುವಂಥವನು ಆತ್ಮದಲ್ಲಿ ಪ್ರಭುವಿನೊಂದಿಗೆ ಒಂದಾಗಿರುತ್ತಾನೆ.

[18] ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

[19] ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.

[20] ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.

ಕೊರಿಂಥದವರಿಗೆ ಬರೆದ ಮೊದಲನೆ ಪತ್ರ — Chapters