[1] ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.
[2] ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.
[3] ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
[4] ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.
[5] ಆದರೆ ಅವಿಶ್ವಾಸಿಗಳು ತಾವು ಮಾಡುವ ಕಾರ್ಯಗಳ ಬಗ್ಗೆ ತಾವೇ ವಿವರಣೆಯನ್ನು ನೀಡಬೇಕಾಗುತ್ತದೆ. ಜೀವಂತವಾಗಿರುವ ಮತ್ತು ಸತ್ತಿರುವ ಜನರಿಗೆ ತೀರ್ಪು ನೀಡಲು ಸಿದ್ಧನಾಗಿರುವ ಕ್ರಿಸ್ತನಿಗೆ ಅವರು ವಿವರಣೆ ನೀಡಬೇಕಾಗುವುದು.
[6] ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.
[7] ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.
[8] ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.
[9] ಗುಣುಗುಟ್ಟದೆ ಅತಿಥಿಸತ್ಕಾರ ಮಾಡಿರಿ.
[10] ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.
[11] ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.
[12] ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.
[13] ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.
[14] ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.
[15] ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.
[16] ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು.
[17] ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?
[18] “ನೀತಿವಂತನೇ ರಕ್ಷಣೆ ಹೊಂದಲು ಕಷ್ಟವಾದರೆ, ಭಕ್ತಿಹೀನನ ಮತ್ತು ಪಾಪಿಷ್ಠನ ಗತಿಯೇನು?”ಜ್ಞಾನೋಕ್ತಿ. 11:31
[19] ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.