Skip to content
Opens in a new window
Listen to this chapter • 4:11

[1] ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.

[2] ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.

[3] ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.

[4] ಪ್ರತಿಯೊಬ್ಬನು ತನ್ನ ನಡತೆಯನ್ನು ತಾನೇ ವಿಮರ್ಶಿಸಿಕೊಳ್ಳಲಿ. ಆಗ ತಾನೇನಾದರೂ ಹೆಚ್ಚಳಪಡುವಂತ ಕಾರ್ಯಗಳನ್ನು ಮಾಡಿದ್ದರೆ ಅವನಿಗೆ ತಿಳಿಯುವುದು.

[5] ಪ್ರತಿಯೊಬ್ಬನು ತನ್ನ ಜವಾಬ್ದಾರಿಕೆಯನ್ನು ತಾನೇ ಹೊತ್ತುಕೊಳ್ಳಬೇಕು.

[6] ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.

[7] ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.

[8] ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.

[9] ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.

[10] ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.

[11] ಇದನ್ನು ನಾನೇ ಕೈಯಾರೆ ಬರೆಯುತ್ತಿದ್ದೇನೆ. ನಾನು ಎಷ್ಟು ದೊಡ್ಡ ಅಕ್ಷರಗಳಲ್ಲಿ ಬರೆಯುತ್ತಿದ್ದೇನೆಂಬುದನ್ನು ನೋಡಿರಿ.

[12] ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.

[13] ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.

[14] ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.

[15] ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.

[16] ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ.

[17] ಆದ್ದರಿಂದ ಇನ್ನು ಮೇಲೆ ನನಗೆ ತೊಂದರೆ ಕೊಡಬೇಡಿ. ನನ್ನ ದೇಹದ ಮೇಲೆ ಬಾಸುಂಡೆಯ ಗುರುತುಗಳಿವೆ. ನಾನು ಕ್ರಿಸ್ತನವನೆಂಬುದಕ್ಕೆ ಈ ಗುರುತುಗಳೇ ಸಾಕ್ಷಿ.

[18] ನನ್ನ ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲೆಂದು ಪ್ರಾರ್ಥಿಸುತ್ತೇನೆ. ಆಮೆನ್.

ಗಲಾತ್ಯದವರಿಗೆ ಬರೆದ ಪತ್ರ — Chapters