[1] ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
[2] ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)
[3] ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.
[4] ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು.
[5] ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
[6] ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.
[7] ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
[8] ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.
[9] ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.
[10] ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
[11] ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
[12] ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಹೀಗೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ?
[13] ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.
[14] ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು.
[15] ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು.
[16] ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
[17] ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.
[18] “ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.
[19] ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.
[20] ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
[21] ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.
[22] ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.
[23] ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು.
[24] ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು.
[25] ಆ ಶಿಷ್ಯನು ಯೇಸುವಿನ ಸಮೀಪಕ್ಕೆ ಬಾಗಿಕೊಂಡು, “ಪ್ರಭುವೇ, ಅವನು ಯಾರು?” ಎಂದು ಕೇಳಿದನು.
[26] ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.
[27] ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.
[28] ಯೇಸು ಯೂದನಿಗೆ ಏಕೆ ಹಾಗೆ ಹೇಳಿದನೆಂದು ಊಟಕ್ಕೆ ಕುಳಿತಿದ್ದವರಲ್ಲಿ ಯಾರಿಗೂ ಅರ್ಥವಾಗಲಿಲ್ಲ.
[29] ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.
[30] ಯೇಸು ಕೊಟ್ಟ ರೊಟ್ಟಿಯನ್ನು ತೆಗೆದುಕೊಂಡ ನಂತರ ಯೂದನು ಅಲ್ಲಿಂದ ಹೊರಟುಹೋದನು. ಆಗ ರಾತ್ರಿಯಾಗಿತ್ತು.
[31] ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು.
[32] ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.
[33] ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
[34] “ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.
[35] ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
[36] ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.
[37] ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.
[38] ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.