Skip to content
Opens in a new window
Listen to this chapter • 9:44

[1] ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:

[2] “ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.

[3] ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.

[4] ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.

[5] ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”

[6] ಪ್ರಭುವು ಈ ಸಾಮ್ಯವನ್ನು ಹೇಳಿದ ಮೇಲೆ ತನ್ನ ಶಿಷ್ಯರಿಗೆ, “ಕೇಳಿರಿ! ಆ ಅನ್ಯಾಯಗಾರನಾದ ನ್ಯಾಯಾಧೀಶನು ಹೇಳಿದ್ದರಲ್ಲಿ ಅರ್ಥವಿದೆ.

[7] ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!

[8] ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.

[9] ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.

[10] “ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು.

[11] ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

[12] ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.

[13] “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.

[14] ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”

[15] ಕೆಲವು ಜನರು ತಮ್ಮ ಚಿಕ್ಕಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತಂದರು. ಆದರೆ ಶಿಷ್ಯರು ಇದನ್ನು ನೋಡಿ, “ಮಕ್ಕಳನ್ನು ತರಕೂಡದು” ಎಂದು ಜನರಿಗೆ ಹೇಳಿದರು.

[16] ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.

[17] ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.

[18] ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು.

[19] ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು.

[20] ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.

[21] ಅದಕ್ಕೆ ಅವನು, “ನಾನು ಚಿಕ್ಕಂದಿನಿಂದಲೂ ಆ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ!” ಎಂದು ಹೇಳಿದನು.

[22] ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.

[23] ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.

[24] ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರರಾಜ್ಯಕ್ಕೆ ಸೇರುವುದು ಬಹಳ ಕಷ್ಟ!

[25] ಐಶ್ವರ್ಯವಂತನು ದೇವರ ರಾಜ್ಯಕ್ಕೆ ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು.

[26] ಜನರು ಯೇಸುವಿನ ಈ ಮಾತನ್ನು ಕೇಳಿ, “ಹಾಗಾದರೆ ಯಾರಿಗೆ ರಕ್ಷಣೆಯಾಗುವುದು?” ಎಂದು ಕೇಳಿದರು.

[27] ಯೇಸು ಅವರಿಗೆ, “ಜನರಿಗೆ ಅಸಾಧ್ಯವಾದ ಕಾರ್ಯಗಳನ್ನು ದೇವರು ಮಾಡಬಲ್ಲನು” ಎಂದು ಉತ್ತರಿಸಿದನು.

[28] ಪೇತ್ರನು, “ನೋಡು, ನಾವು ನಮ್ಮದೆಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು!” ಅಂದನು.

[29] ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು.

[30] ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.

[31] ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!

[32] ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.

[33] ಅವರು ಆತನಿಗೆ ಕೊರಡೆಗಳಿಂದ ಹೊಡೆಯುವರು ಮತ್ತು ಆತನನ್ನು ಕೊಲ್ಲುವರು! ಆದರೆ ಆತನು ತನ್ನ ಮೂರನೇ ದಿನದಲ್ಲಿ ಮತ್ತೆ ಜೀವಂತವಾಗಿ ಎದ್ದುಬರುವನು” ಅಂದನು.

[34] ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.

[35] ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆ ರಸ್ತೆಯ ಪಕ್ಕದಲ್ಲಿ ಒಬ್ಬ ಕುರುಡನು ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.

[36] ಆ ರಸ್ತೆಯಲ್ಲಿ ಜನಸಮೂಹದ ಶಬ್ದವನ್ನು ಕೇಳಿ ಆ ಕುರುಡನು, “ಯಾವ ಸಮಾರಂಭ ನಡೆಯುತ್ತಿದೆ?” ಎಂದು ಕೇಳಿದನು.

[37] ಜನರು ಅವನಿಗೆ, “ನಜರೇತಿನ ಯೇಸು ಬರುತ್ತಿದ್ದಾನೆ” ಎಂದು ತಿಳಿಸಿದರು.

[38] ಆ ಕುರುಡನು ಗಟ್ಟಿಯಾಗಿ, “ಯೇಸುವೇ, ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.

[39] ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.

[40] ಯೇಸು ಅಲ್ಲೇ ನಿಂತು, “ಆ ಕುರುಡನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ಆ ಕುರುಡನು ಹತ್ತಿರಕ್ಕೆ ಬಂದಾಗ, ಯೇಸು ಅವನಿಗೆ

[41] “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.

[42] ಯೇಸು ಅವನಿಗೆ, “ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಎಂದು ಹೇಳಿದನು.

[43] ಆಗ ಆ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಈ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.

ಲೂಕನ ಸುವಾರ್ತೆ — Chapters