Skip to content
Opens in a new window
Listen to this chapter • 8:23

[1] ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.

[2] ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.

[3] ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.

[4] ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.

[5] ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.

[6] ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.

[7] ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.

[8] ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”

[9] ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.

[10] ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.

[11] ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.

[12] ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.

[13] ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.

[14] ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.

[15] ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು.

[16] ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು.

[17] ದೇವದೂತನು ಗೋಡೆಯನ್ನೂ ಅಳೆದನು. ಅದು ಮನುಷ್ಯರ ಮೊಳದಲ್ಲಿ 144 ಮೊಳವಿತ್ತು. ದೇವದೂತನು ಉಪಯೋಗಿಸಿದ ಅಳತೆಮಾನವೇ ಅದು.

[18] ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು.

[19] ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,

[20] ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ.

[21] ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.

[22] ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ.

[23] ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.

[24] ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ.

[25] ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.

[26] ಜನಾಂಗಗಳ ವೈಭವ ಮತ್ತು ಗೌರವಗಳು ನಗರಕ್ಕೆ ಬರುತ್ತವೆ.

[27] ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.

ಯೋಹಾನನು ಬರೆದ ಪ್ರಕಟನೆ — Chapters