Skip to content
Opens in a new window
Listen to this chapter • 7:14

[1] ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,

[2] ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.

[3] ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.

[4] ಅವರು ಆತನ ಮುಖವನ್ನು ನೋಡುತ್ತಾರೆ. ದೇವರ ಹೆಸರನ್ನು ಅವರ ಹಣೆಗಳ ಮೇಲೆ ಬರೆಯಲಾಗುತ್ತದೆ.

[5] ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.

[6] ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:

[7] ‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.

[8] ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.

[9] ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.

[10] ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ.

[11] ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.

[12] “ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.

[13] ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.

[14] “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.

[15] ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.

[16] “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”

[17] ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.

[18] ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ.

[19] ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.

[20] ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!

[21] ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ.

ಯೋಹಾನನು ಬರೆದ ಪ್ರಕಟನೆ — Chapters